ಬೆಂಗಳೂರು:2024-25ನೇ ಶೈಕ್ಷಣಿಕ ಸಾಲಿನಿಂದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕನ್ನಡ ಮಾಧ್ಯಮದ ಜೊತೆಗೆ ಆಂಗ್ಲ ಮಾಧ್ಯಮ ತರಗತಿಗಳನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.
ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮೊದಲನೇ ಹಂತದಲ್ಲಿ 1,419 ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕನ್ನಡ ಮಾಧ್ಯಮ ಜೊತೆಯಲ್ಲಿ ದ್ವಿಭಾಷಾ ಮಾಧ್ಯಮ ಶಾಲೆಗಳನ್ನು ಪ್ರಾರಂಭಿಸಲು ಅನುಮತಿಸಿ ಆದೇಶಿಸಿದೆ.
ಅದರಂತೆ ಈಗಾಗಲೇ ಮೊದಲ ಹಂತದಲ್ಲಿ ಆಯ್ದ 1419 ಪ್ರಾಥಮಿಕ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ ಶಾಲೆಗಳನ್ನು ಪ್ರಾರಂಭಿಸಿ ಅನುಷ್ಠಾನಗೊಳಿಸಲಾಗಿದೆ.
ಪ್ರಸ್ತುತ ಎರಡನೇ ಹಂತದಲ್ಲಿ ರಾಜ್ಯದ 373 ಸರಕಾರಿ ಪ್ರಾಥಮಿಕ ಶಾಲೆಗಳನ್ನು ಗುರುತಿಸಿ ಒಂದನೇ ತರಗತಿಯಿಂದ ನಡೆಯುತ್ತಿರುವ ಕನ್ನಡ ಸೇರಿ ಇತರೆ ಮಾಧ್ಯಮದ ಜೊತೆಗೆ ಹೊಸದಾಗಿ ಇಂಗ್ಲಿಷ್ ಮಾಧ್ಯಮ ತರಗತಿಗಳನ್ನು ಪ್ರಾರಂಭಿಸಲು ಅನುಮೋದನೆ ಕೋರಲಾಗಿತ್ತು. ಅದರಂತೆ ಸರ್ಕಾರ 2024-25ನೇ ಶೈಕ್ಷಣಿಕ ಸಾಲಿನಿಂದ ಆದೇಶದಂತೆ 373 ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಪ್ರಾರಂಭಿಸಲು ಅನುಮತಿ ನೀಡಿದ್ದು, ನಿಯಮಾನುಸಾರ ಅಗತ್ಯ ಕ್ರಮಗಳನ್ನು ವಹಿಸುವಂತೆ ಇಲಾಖೆಗೆ ಸೂಚಿಸಿದೆ.