ಬೆಂಗಳೂರು: ‘ಭೋವಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ರೂ. ಅವ್ಯವಹಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಆರೋಪಿಯಾಗಿದ್ದ ವಕೀಲೆ ಎಸ್.ಜೀವಾ ಅವರ ಆತ್ಮಹತ್ಯೆ ಪ್ರಕರಣದ ತನಿಖೆಗೆ ಸಿಬಿಐ ಎಸ್‌ಪಿ ನೇತೃತ್ವದಲ್ಲಿ ಎಸ್‌ಐಟಿ ರಚಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ವರದಿ ಸಲ್ಲಿಸಲು ಮೂರು ತಿಂಗಳ ಗಡುವು ವಿಧಿಸಿದೆ.
ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಕೋರಿ ಬೆಂಗಳೂರು ವಕೀಲರ ಸಂಘ ಸಲ್ಲಿಸಿದ್ದ ಮಧ್ಯಂತರ ಅರ್ಜಿ ಹಾಗೂ ಜೀವಾ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಕುರಿತು ತಮ್ಮ ವಿರುದ್ಧ ಬನಶಂಕರಿ ಠಾಣಾ ಪೊಲೀಸರು ದಾಖಲಿಸಿರುವ ಎಫ್ಐಆರ್ ರದ್ದುಪಡಿಸುವಂತೆ ಕೋರಿ ಡಿವೈಎಸ್ಪಿ ಕನಕಲಕ್ಷ್ಮಿ ಅವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ವಜಾಗೊಳಿಸಿದೆ.
ಪ್ರಕರಣದ ತನಿಖೆಯನ್ನು ಬೆಂಗಳೂರು ಸಿಬಿಐ, ಎಸ್‌ಪಿ ವಿನಾಯಕ ವರ್ಮಾ ನೇತೃತ್ವದ ಮೂವರು ಅಧಿಕಾರಿಗಳ ವಿಶೇಷ ತನಿಖಾ ತಂಡ (ಎಸ್‌ಐಟಿ) ನಡೆಸಬೇಕು. ಕರ್ನಾಟಕ ಗೃಹ ರಕ್ಷಕ ದಳದ ಎಸ್‌ಪಿ ಹಕಾಯ ಅಕ್ಷಯ್ ಮಲ್ಲೀಂದ್ರ, ಆಂತರಿಕ ಭದ್ರತಾ ವಿಭಾಗದ ಎಸ್‌ಪಿ ನಿಶಾ ಜೇಮ್ಸ್ ಈ ಎಸ್‌ಐಟಿ ತನಿಖಾ ತಂಡದಲ್ಲಿದ್ದಾರೆ.