ಬೆಂಗಳೂರು: ಮುಡಾ ಸೈಟು ಹಂಚಿಕೆಯಲ್ಲಿ ಅಕ್ರಮ ಆರೋಪ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಕೋರಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅರ್ಜಿ ಸಲ್ಲಿಸಿದ್ದಾರೆ.
ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಬಾವಮೈದುನ ಮಲ್ಲಿಕಾರ್ಜುನಸ್ವಾಮಿಗೆ ಹ್ಯಾಂಡ್ ಸಮನ್ಸ್ ನೀಡಲು ಹೈಕೋರ್ಟ್, ಅರ್ಜಿದಾರ ಸ್ನೇಹಮಯಿ ಕೃಷ್ಣಗೆ ನಿರ್ದೇಶಿಸಿದೆ.
ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಅರ್ಜಿಯು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತು. ಅಲ್ಲದೆ, ಅರ್ಜಿಯಲ್ಲಿ ಜಾರಿ ನಿರ್ದೇಶನಾಲಯವನ್ನು ಪ್ರತಿವಾದಿ ಮಾಡುವಂತೆ ಕೋರಿ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಮಧ್ಯಂತರ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ನ್ಯಾಯಾಲಯ ರಾಜ್ಯ ಸರಕಾರಕ್ಕೆ ಒಂದು ವಾರ ಕಾಲಾವಕಾಶ ನೀಡಿದೆ.