ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರ ಮೇಲೆ ಮೊಟ್ಟೆ ಎಸೆದ ಪ್ರಕರಣ ಸಂಬಂಧ ಪೊಲೀಸರಿಂದ ಮೂವರ ಬಂಧನ
ಬೆಂಗಳೂರು: ಜಾತಿನಿಂದನೆ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾಗಿರುವ ರಾಜರಾಜೇಶ್ವರಿ ನಗರ ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆದಿರುವ ಘಟನೆ ನಂದಿನಿ ಲೇಔಟ್ ನಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.
ಅಟಲ್ ಬಿಹಾರಿ ವಾಜಪೇಯಿ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಮುನಿರತ್ನ ಅವರು ತೆರಳುತ್ತಿದ್ದರು. ನಂದಿನಿ ಲೇಔಟ್ ಬಳಿ ಮುನಿರತ್ನ ಅವರ ಮೇಲೆ ಮೊಟ್ಟೆ ಎಸೆಯಲಾಗಿದೆ. ಈ ಪ್ರಕರಣ ಸಂಬಂಧ ಮೂವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.
ಲಕ್ಷ್ಮಿದೇವಿನಗರ ವಾರ್ಡ್ ನ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ವಾಜಪೇಯಿ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳಿದ ಮುನಿರತ್ನ ಬೆಂಬಲಿಗರ ಜೊತೆ ತೆರಳುತ್ತಿದ್ದ ಸಮಯದಲ್ಲಿ ಈ ಘಟನೆ ನಡೆದಿದೆ.
ಘಟನೆಗೆ ಕುಸುಮಾ ಹಾಗೂ ಹನುಮಂತರಾಯಪ್ಪ ಕಾರಣ ಎಂದು ಆರೋಪಿಸಿರುವ ಮುನಿರತ್ನ, ನನ್ನನ್ನು ಕೊಲೆ ಮಾಡಲು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಸುರೇಶ್ ಯತ್ನಿಸುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.