ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್‌ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಶಾಸಕ ವಿನಯ್ ಕುಲಕರ್ಣಿ ಜಾಮೀನು ರದ್ದು ಕೋರಿ ಸಿಬಿಐ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸೋಮವಾರ ಅರ್ಜಿ ಸಲ್ಲಿಸಿದೆ.
ಸಿಬಿಐ ಪರ ವಕೀಲ ಗಂಗಾಧರ ಶೆಟ್ಟಿ, ಜಾಮೀನು ರದ್ದು ಕೋರಿ ಅರ್ಜಿ ಸಲ್ಲಿಸಿದರು. ಈ ವೇಳೆ ಯಾವ ಕಾರಣಕ್ಕಾಗಿ ಜಾಮೀನು ರದ್ದು ಮಾಡಬೇಕು ಎಂಬುದರ ಕುರಿತು ನ್ಯಾಯಾಲಯಕ್ಕೆ ವಿವರಣೆ ನೀಡಿದರು. ಶಾಸಕ ವಿನಯ್ ಕುಲಕರ್ಣಿ ಅವರು ಪರೋಕ್ಷವಾಗಿ ಸಾಕ್ಷಿಗಳಿಗೆ ಬೆದರಿಕೆ ಹಾಕುತ್ತಿದ್ದಾರೆ. ಇದು ಜಾಮೀನಿನ ಷರತ್ತಿನ ಸ್ಪಷ್ಟ ಉಲ್ಲಂಘನೆ. ಈ ಹಿನ್ನೆಲೆಯಲ್ಲಿ ಜಾಮೀನು ರದ್ದು ಮಾಡಬೇಕು ಎಂದು ವಾದಿಸಿದರು.
ವಾದ ಆಲಿಸಿದ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಆರೋಪಿ ಪರ ವಕೀಲರಿಗೆ ಈ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿ, ವಿಚಾರಣೆಯನ್ನು ಮುಂದೂಡಿದರು.