ಬೆಂಗಳೂರು: ಚಿಂತಕ, ಲೇಖಕ, ರಾಜಕೀಯ ತಜ್ಞ ಪ್ರೊ.ಮುಜಾಫರ್ ಅಸ್ಸಾದಿ (63) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ಮುಂಜಾನೆ ನಿಧನರಾದರು.
ಮೃತರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಮೈಸೂರಿನ ಸರಸ್ವತಿಪುರಂನ ಮುಸ್ಲಿಂ ವಿದ್ಯಾರ್ಥಿನಿಲಯದಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಅಸ್ಸಾದಿ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಮೈಸೂರು ವಿಶ್ವವಿದ್ಯಾಲಯದ ಹಂಗಾಮಿ ಕುಲಪತಿಯಾಗಿ 2022ರಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಇದಕ್ಕೂ ಮೊದಲು ರಾಜ್ಯಶಾಸ್ತ್ರ ಅಧ್ಯಯನ ವಿಭಾಗದಲ್ಲಿ ಪ್ರಾಧ್ಯಾಪಕ, ಮುಖ್ಯಸ್ಥ ಹಾಗೂ ವಿಶ್ವವಿದ್ಯಾಲಯದ ಕಲಾನಿಕಾಯದ ಡೀನ್ ಆಗಿದ್ದರು.
ಉಡುಪಿ ಜಿಲ್ಲೆಯ ಶಿರ್ವ ಗ್ರಾಮದವರಾದ ಅವರು ಮಂಗಳೂರು ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ, ನವದೆಹಲಿಯ ಜವಹರಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ಎಂ.ಫಿಲ್ ಹಾಗೂ ಪಿಎಚ್‌ಡಿ, ಷಿಕಾಗೊ ವಿಶ್ವವಿದ್ಯಾಲಯದಲ್ಲಿ ಪೋಸ್ಟ್ ಡಾಕ್ಟೋರಲ್ ಪದವಿ ಪಡೆದಿದ್ದರು.
ಕರ್ನಾಟಕದಲ್ಲಿ ಬಹುರೂಪಿ ಸ್ತ್ರೀವಾದ ಕಥನಗಳು ಮತ್ತು ಚಳವಳಿ, ಅಸ್ಮಿತೆ, ರಾಜಕಾರಣ ಮತ್ತು ಮೂಲಭೂತವಾದ ಸೇರಿದಂತೆ 11 ಕೃತಿಗಳನ್ನು ರಚಿಸಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿ 2021ನೇ ಸಾಲಿನ ಪ್ರಶಸ್ತಿ ಪಡೆದಿದ್ದಾರೆ.