ಬೆಂಗಳೂರು: ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರೂ ಸೇರಿದಂತೆ ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಐದು ಸಾವಿರ ಹುದ್ದೆಗಳ ಭರ್ತಿಗೆ ಅನುಮತಿ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವ ಸಲ್ಲಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಹೇಳಿದರು.
ಕಾಲೇಜು ಶಿಕ್ಷಣ ಇಲಾಖೆಗೆ ನೂತನವಾಗಿ ನೇಮಕವಾದ ಸಹಾಯಕ ಪ್ರಾಧ್ಯಾಪಕರಿಗೆ ಸೋಮವಾರ ಹಮ್ಮಿಕೊಂಡಿದ್ದ ‘ಹೊಸ ಹಾದಿ’ ವೃತ್ತಿ ಮಾರ್ಗದರ್ಶನ ಕಾರ್ಯಾಗಾರದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
2021ರಲ್ಲಿ ಆರಂಭವಾದ 1,242 ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆಗೆ ಹಲವು ವಿಘ್ನಗಳು ಎದುರಾಗಿದ್ದವು. ವಿಶೇಷ ವರ್ಗಾವಣೆ, ಕಲ್ಯಾಣ ಕರ್ನಾಟಕ ಮೀಸಲಾತಿ ಹಂಚಿಕೆ, ನ್ಯಾಯಾಲಯದ ಪ್ರಕರಣ ಸೇರಿದಂತೆ ಎಲ್ಲ ಸಮಸ್ಯೆಗಳನ್ನೂ ಇತ್ಯರ್ಥಪಡಿಸಿಕೊಂಡು ನೇಮಕಾತಿ ಆದೇಶ ನೀಡಲಾಗಿದೆ. ಉನ್ನತ ಶಿಕ್ಷಣದಲ್ಲಿ ಕೌಶಲ ಕಲಿಕೆಗೆ ಆದ್ಯತೆ ನೀಡಲಾಗಿದ್ದು, ಹಲವು ಹೊಸ ಕೋರ್ಸ್‌ಗಳನ್ನು ಪರಿಚಯಿಸಲಾಗಿದೆ. ಹೊಸದಾಗಿ ನೇಮಕವಾದವರು ಗುಣಮಟ್ಟದ ಬೋಧನೆಯತ್ತ ಗಮನಹರಿಸಬೇಕು ಎಂದರು.