ಸುದ್ದಿ

ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ: ಹೈಕೋರ್ಟ್‌ನಿಂದ ನಿರೀಕ್ಷಣಾ ಜಾಮೀನು

Share It

ಬೆಂಗಳೂರು: ಅಪ್ರಾಪ್ತಗೆ ಲೈಂಗಿಕ ಕಿರುಕುಳ ನೀಡಿದ
ಆರೋಪಕ್ಕೆ ಸಂಬಂಧಿಸಿದಂತೆ ಪೋಕ್ಸೋ ಕಾಯ್ದೆಯಡಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದು ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಲ್ಲಿಸಿರುವ ಅರ್ಜಿಯನ್ನು ಭಾಗಶಃ ಪುರಸ್ಕರಿಸಿರುವ ಹೈಕೋರ್ಟ್, ಪ್ರಕರಣ ರದ್ದುಗೊಳಿಸಲು ನಿರಾಕರಿಸಿದೆ.

ಅಲ್ಲದೆ, ಬಂಧನದ ಭೀತಿಯಲ್ಲಿ ಯಡಿಯೂರಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಪುರಸ್ಕರಿಸಿದ್ದು, ಬಂಧನದಿಂದ ಅವರು ಸಧ್ಯಕ್ಕೆ ಪಾರಾಗಿದ್ದಾರೆ. ಬೆಂಗಳೂರಿನ ಸದಾಶಿವನಗರ ಠಾಣೆಯಲ್ಲಿ ದಾಖಲಾಗಿರುವ ಪೋಕ್ಸೋ ಪ್ರಕರಣ ರದ್ದುಪಡಿಸುವಂತೆ ಯಡಿಯೂರಪ್ಪ ಅವರು ಸಲ್ಲಿಸಿರುವ ಅರ್ಜಿ ಕುರಿತ ವಿಚಾರಣೆಯನ್ನು ಜನವರಿ 17ರಂದು ಪೂರ್ಣಗೊಳಿಸಿತ್ತು. ಕಾಯ್ದಿರಿಸಿರುವ ತೀರ್ಪನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಶುಕ್ರವಾರ ಪ್ರಕಟಿಸಿತು.

ಜೊತೆಗೆ, ಪೋಕ್ಸ್‌ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಸಕ್ಷಮ ನ್ಯಾಯಾಲಯ ಸಂಜ್ಞೆ ಪರಿಗಣಿಸಿರುವ ಆದೇಶವನ್ನು ಹೈಕೋರ್ಟ್ ರದ್ದುಮಾಡಿದೆ

ಬೆಂಗಳೂರಿನ ಡಾಲರ್ಸ್‌ ಕಾಲೋನಿಯಲ್ಲಿರುವ ‘ಧವಳಗಿರಿ’ ನಿವಾಸದಲ್ಲಿ 2024ರ ಫೆಬ್ರುವರಿ 2ರಂದು ಬೆಳಗ್ಗೆ 11ರಿಂದ 11.30ರ ನಡುವೆ ‘ಬಾಲಕಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ’ ಎಂದು ಆರೋಪಿಸಲಾಗಿದೆ.

ಯಡಿಯೂರಪ್ಪ ವಿರುದ್ಧ ಪೋಕ್ಸೋ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ-2012) ಕಲಂ 8ರ ಅಡಿಯಲ್ಲಿ ಲೈಂಗಿಕ ದೌರ್ಜನ್ಯ, ಭಾರತೀಯ ದಂಡ ಸಂಹಿತೆ-1860ರ (ಐಪಿಸಿ) ಕಲಂ 354 (ಎ)ರ ಅಡಿಯಲ್ಲಿ ಲೈಂಗಿಕ ಕಿರುಕುಳದ ಆರೋಪ ಹೊರಿಸಲಾಗಿದೆ. ಅವರ ಸಹಚರರಾದ ಇತರ ಮೂವರ ವಿರುದ್ಧ ಐಪಿಸಿ ಕಲಂ 204 ಮತ್ತು 214ರ ಅಡಿಯಲ್ಲಿ ಕ್ರಮವಾಗಿ ಸಾಕ್ಷ್ಯ ನಾಶಪಡಿಸಲು ಮತ್ತು ಉಡುಗೊರೆಗಳನ್ನು ನೀಡಲು ಮುಂದಾದ ಅಪರಾಧಗಳಡಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ.


Share It

You cannot copy content of this page