ಬೆಂಗಳೂರು: ಹಣಕ್ಕಾಗಿ ನಕಲಿ ಅಂಕಪಟ್ಟಿಗಳನ್ನು ಮಾರಾಟ ಮಾಡುವುದು ಅತ್ಯಂತ ಗಂಭೀರ ಅಪರಾಧವಷ್ಟೇ ಅಲ್ಲ, ಇದು ವಿನಾಶಕಾರಿ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ನಕಲಿ ಅಂಕಪಟ್ಟಿಗಳನ್ನು ಮಾರಾಟ ಮಾಡುತ್ತಿದ್ದ ಆರೋಪಿ ವಿರುದ್ಧದ ಪ್ರಕರಣ ರದ್ದುಪಡಿಸಲು ನಿರಾಕರಿಸಿದೆ.
ನಕಲಿ ಅಂಕಪಟ್ಟಿ ಮಾರಾಟ ಆರೋಪಕ್ಕೆ ಸಿಲುಕಿರುವ ಕಾಸರಗೋಡಿನ ಮೊಹಮ್ಮದ್ ಶಾಹಿದ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎಂ. ಜಿ. ಉಮಾ ಅವರಿದ್ದ ನ್ಯಾಯಪೀಠ ಈ ತೀರ್ಪು ನೀಡಿದೆ.
ಹೈಕೋರ್ಟ್ ತನ್ನ ತೀರ್ಪಿನಲ್ಲಿ, ಅರ್ಜಿದಾರರ ವಿರುದ್ಧದ ಆರೋಪ ಇಡೀ ಆಡಳಿತ ವ್ಯವಸ್ಥೆಯ ವಿರುದ್ಧದ ಕೃತ್ಯವಾಗಿದೆ. ನಕಲಿ ಪದವಿ ಮತ್ತು ಡಿಪ್ಲೊಮಾ ಮಾರ್ಕ್ಸ್ ಕಾರ್ಡ್ಗಳನ್ನು ಸೃಷ್ಟಿಸಿ ಅನರ್ಹ ವ್ಯಕ್ತಿಗಳಿಗೆ ಮಾರಾಟ ಮಾಡಿ ವಿವಿಧ ಕ್ಷೇತ್ರಗಳಿಗೆ ಪ್ರವೇಶ ಪಡೆಯಲು ಅನುಕೂಲವಾಗುವಂತೆ ಮಾಡುವುದು ಅತ್ಯಂತ ವಿನಾಶಕಾರಿ ಪರಿಣಾಮ ಬೀರಲಿದೆ ಎಂದು ತಿಳಿಸಿ, ಅರ್ಜಿಯನ್ನು ವಜಾಗೊಳಿಸಿದೆ.
ಪ್ರಕರಣದ ಹಿನ್ನೆಲೆ: ಅರ್ಜಿದಾರರು ದೇಶದ ವಿವಿಧ ವಿಶ್ವವಿದ್ಯಾಲಯಗಳ ಹೆಸರಿನಲ್ಲಿ ನಕಲಿ ಅಂಕಪಟ್ಟಿ ಹಾಗೂ ಡಿಗ್ರಿ ಸರ್ಟಿಫಿಕೇಟ್ ಗಳನ್ನು ಸೃಷ್ಟಿಸಿ, ಮಾರಾಟ ಮಾಡುತ್ತಿದ್ದ ಆರೋಪದಡಿ ಸಿಸಿಬಿ ಅಧಿಕಾರಿಗಳು ಅರ್ಜಿದಾರರ ಕಚೇರಿ ಮೇಲೆ ದಾಳಿ ನಡೆಸಿದ್ದರು. ದಾಳಿ ವೇಳೆ ಕರ್ನಾಟಕದ ಎಸ್ಎಸ್ಎಲ್ಸಿ ಬೋರ್ಡ್ ಸೇರಿದಂತೆ ಆಗ್ರಾದ ಡಾ. ಬಿ.ಆರ್. ಅಂಬೇಡ್ಕರ್ ವಿವಿ, ಚತ್ತಿಸ್‌ಘಡ ವಿವಿ, ಬಿಸ್ಲಾಪುರ್ ಡಾ. ಸಿ.ವಿ. ರಾಮನ್ ವಿವಿ, ವಿವಿಧ ವಿಶ್ವವಿದ್ಯಾಲಯ ಮತ್ತು ಬೋರ್ಡ್ಗಳ ನಕಲಿ ಅಂಕಪಟ್ಟಿಗಳು ಮತ್ತು ಪ್ರಮಾಣಪತ್ರಗಳನ್ನು ಮಾರಾಟ ಮಾಡುತ್ತಿದ್ದುದು ಬೆಳಕಿಗೆ ಬಂದಿತ್ತು ಎನ್ನಲಾಗಿದೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸಿ ಆರೋಪ ಪಟ್ಟಿ ಸಲ್ಲಿಸಿದ್ದರು. ಬಳಿಕ ಪ್ರಕರಣ ರದ್ದುಕೋರಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು.