ಬೆಂಗಳೂರು: ಮೈಕ್ರೋ ಫೈನಾನ್ಸ್ ಕಂಪನಿಗಳಿಂದ
ಯಾವುದೇ ಜಿಲ್ಲೆಗಳಲ್ಲಿ ಸಾಲ ವಸೂಲಾತಿ ಸಂದರ್ಭದಲ್ಲಿ ಸಾಲಗಾರರಿಗೆ ಕಿರುಕುಳ ನೀಡುವ ಪ್ರಕರಣ ಗಮನಕ್ಕೆ ಬಂದರೆ ಆಯಾ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳನ್ನೇ ನೇರ ಹೊಣೆ ಗಾರರನ್ನಾಗಿ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದರು.
ಮೈಕ್ರೋ ಫೈನಾನ್ಸ್ ಕುರಿತು ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಶನಿವಾರ ವಿಡಿಯೋ ಸಂವಾದ ನಡೆಸಿದ ಸಿಎಂ ಹಲವು ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ ನೀಡಿದ್ದಾರೆ.
ಕ್ರಿಮಿನಲ್ ಕೇಸ್ ದಾಖಲಿಸಿ: ಸಾಲ ವಸೂಲಾತಿ ಸಂದರ್ಭದಲ್ಲಿ ಸಾಲಗಾರರಿಗೆ ಯಾವುದೇ ಕಿರುಕುಳ ಉಂಟಾಗಬಾರದು ಎಂಬ ಉದ್ದೇಶದಿಂದ ಕಾಯ್ದೆಯನ್ನು ಕಟ್ಟುನಿಟ್ಟು ಜಾರಿಗೊಳಿಸಲಾಗಿದೆ. ಸಾಲಗಾರರಿಗೆ ಯಾವುದೇ ಸಂದರ್ಭದಲ್ಲಿ ಕಿರುಕುಳ ನೀಡಿದರೆ ಮುಲಾಜಿಲ್ಲದೆ ಕ್ರಿಮಿನಲ್ ಕೇಸ್ ದಾಖಲಿಸಿ ಎಂದು ಸೂಚಿಸಿದರು.
ರಾಜ್ಯಾದ್ಯಂತ ಪರವಾನಿಗೆ ಪಡೆಯದ ಅಕ್ರಮ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಚಟುವಟಿಕೆ ಬಂದ್ ಮಾಡಬೇಕು. ಪರವಾನಿಗೆ ಪಡೆದಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಆರ್‌ಬಿಐ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸುವುದನ್ನು ಖಾತ್ರಿಪಡಿಸಬೇಕು ಇದನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನೋಡಿಕೊಳ್ಳುವಂತೆ ಸೂಚನೆ ನೀಡಿದರು.