ಬೆಂಗಳೂರು: ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಲಂಚ ಪಡೆದಿರುವ ಆರೋಪದಲ್ಲಿ ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯ ಪಿಎಸ್‌ಐ ಬಸವರಾಜ್ ಮತ್ತು ಹೆಡ್ ಕಾನ್ಸ್‌ಟೇಬಲ್ ಪೂಜಾರಿ ಎಂಬುವರನ್ನು ಅಮಾನತು ಮಾಡಿ ಡಿಸಿಪಿ ಆದೇಶ ಹೊರಡಿಸಿದ್ದಾರೆ.
ಎಚ್‌ಎಸ್‌ಆರ್ ಲೇಔಟ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ ಠಾಣೆಯ ಪಿಎಸ್‌ಐ ಬಸವರಾಜ್ ಹಾಗೂ ಕಾನ್‌ಸ್ಟೇಬಲ್ ಲ್ಯಾಪ್‌ಟಾಪ್ ಹಾಗೂ 1 ಲಕ್ಷ ರೂ. ಪಡೆದುಕೊಂಡಿರುವ ಆರೋಪ ಕೇಳಿ ಬಂದಿತ್ತು.
ಈ ಬಗ್ಗೆ ಆಗ್ನೆಯ ವಿಭಾಗದ ಡಿಸಿಪಿ ಸಾರಾ ಫಾತಿಮಾ ಅವರು ತನಿಖೆ ನಡೆಸಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರಿಗೆ ವರದಿ ಸಲ್ಲಿಸಿದ್ದರು.
ಪ್ರಕರಣವು ಸಾಬೀತಾದ ಹಿನ್ನೆಲೆಯಲ್ಲಿ ದಯಾನಂದ ಅವರು ಇಬ್ಬರನ್ನೂ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.