ಮೈಸೂರು-ಕುಶಾಲನಗರ ಹೆದ್ದಾರಿ ಯೋಜನೆ ಸಂಬಂಧ ದೀರ್ಘಕಾಲದಿಂದ ಬಾಕಿ ಉಳಿದಿದ್ದ ಪ್ಯಾಕೇಜ್ 3 ನಿರ್ಮಾಣಕ್ಕೆ ಕೇಂದ್ರ ಸರಕಾರದಿಂದ ಅಂತಿಮವಾಗಿ ಅನುಮೋದನೆ ದೊರೆತಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ಪ್ರಕಟಣೆ ನೀಡಿರುವ ಅವರು, ‘ಮೈಸೂರು-ಕುಶಾಲನಗರ ಹೈವೆಗೆ 2023ರ ಮಾರ್ಚ್‌ನಲ್ಲಿ ಪ್ರಧಾನಿ ಸಂಸದ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ಆಗಿರುವ 3ನೇ ಪ್ಯಾಕೇಜ್ (ಹುಣಸೂರು-ಪಿರಿಯಾಪಟ್ಟಣ) ನಿರ್ಮಾಣಕ್ಕೆ ಕೇಂದ್ರದಿಂದ ಅಂತಿಮ ಅನುಮೋದನೆ ದೊರೆತಿದೆ ಎಂಬ ವಿಷಯ ಹಂಚಿಕೊಳ್ಳಲು ಖುಷಿಯಾಗುತ್ತದೆ ಎಂದು ತಿಳಿಸಿದ್ದಾರೆ.
ವರ್ಷಗಳಿಂದ ವಿಳಂಬವಾಗಿದ್ದ ಯೋಜನೆಯ ಅನುಮೋದನೆಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕ ಸಾಧಿಸಲಾಗಿತ್ತು. ಅದರೊಂದಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಈ ಬಗ್ಗೆ ಗಮನ ಸೆಳೆಯಲಾಗಿತ್ತು . ಅವರು ಈ ನಿಟ್ಟಿನಲ್ಲಿ ಶೀಘ್ರ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರು. ಅದರಂತೆ ಈಗ ಯೋಜನೆಗೆ ಅನುಮೋದನೆ ದೊರೆತಿದೆ” ಎಂದು ಹೇಳಿದ್ದಾರೆ.
‘ಈ ಹೆದ್ದಾರಿ ಯೋಜನೆಯ ಸಂಪರ್ಕವನ್ನು ಹೆಚ್ಚಿಸುವಲ್ಲಿ, ಪ್ರಯಾಣವನ್ನು ಸುಗಮಗೊಳಿಸುವಲ್ಲಿ ಮತ್ತು ಮೈಸೂರು ಮತ್ತು ಕೊಡಗಿನ ಆರ್ಥಿಕ ಮತ್ತು ಒಟ್ಟಾರೆ ಅಭಿವೃದ್ಧಿಗೆ ಕೊಡುಗೆ ನೀಡುವಲ್ಲಿ ಬಹಳ ಮಹತ್ವದ್ದಾಗಿದೆ” ಎಂದು ಸಂಸದ ಯದುವೀರ್ ಒಡೆಯರ್ ಹೇಳಿದ್ದಾರೆ.