ಬೆಂಗಳೂರು: ನಗರದ ಕೆ.ಜಿ.ಹಳ್ಳಿ ಮತ್ತು ಡಿ.ಜೆ. ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ತಮ್ಮ ವಿರುದ್ದದ ಆರೋಪಗಳನ್ನು ಕೈಬಿಡುವಂತೆ ಕೋರಿ 15 ಮಂದಿ ಆರೋಪಿಗಳು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಈ ಗಲಭೆ ಪ್ರಕರಣದ 15 ಮಂದಿ ಆರೋಪಿಗಳು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ ನ್ಯಾಯಮೂರ್ತಿ ಶ್ರೀನಿವಾಸ ಹರೀಶ್ ಕುಮಾರ್ ಅವರ ನೇತೃತ್ವದ ವಿಭಾಗೀಯ ಪೀಠ ಆದೇಶಿಸಿದೆ. ಪ್ರಕರಣದಿಂದ ಕೈ ಬಿಡಬೇಕು ಎಂಬ ವಿಚಾರವನ್ನು ಅಧೀನ ನ್ಯಾಯಾಲಯ ಪರಿಗಣಿಸಲು ಅವಕಾಶವಿದೆ. ಹೀಗಾಗಿ, ಹೈಕೋರ್ಟ್ ಮಧ್ಯಪ್ರವೇಶಿಸುವ ಅಗತ್ಯ ಕಂಡು ಬರುತ್ತಿಲ್ಲ ಎಂದು ತಿಳಿಸಿದೆ.
ಆರೋಪ ಪಟ್ಟಿಯಲ್ಲಿನ ಸಾಕ್ಷ್ಯಾಧಾರಗಳನ್ನು ಪರಿಶೀಲಿ ಸಿದ ನ್ಯಾಯಾಲಯ ಅರ್ಜಿದಾರರ ವಿರುದ್ಧದ ಆರೋಪಗಳು ಸಾರ್ವಜನಿಕರಲ್ಲಿ ಭೀತಿ ಉಂಟು ಮಾಡುವುದನ್ನು ತಡೆಯುವ ಉದ್ದೇಶದಿಂದ ಜಾರಿಗೊಳಿಸಿರುವ ಕಾನೂನು ಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯ್ದೆ (ಯುಎಪಿಎ) ಸೆಕ್ಷನ್ 15ರ ವ್ಯಾಪ್ತಿಗೆ ಬರಲಿದೆ ಎಂದು ನ್ಯಾಯಪೀಠ ಹೇಳಿದೆ.
ಏನಿದು ಪ್ರಕರಣ?:ಅಂದಿನ ಪುಲಿಕೇಶಿನಗರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಸಂಬಂಧಿ ಮುಸ್ಲಿಂ ಸಮುದಾಯ ಕುರಿತು ವಿವಾದಾತ್ಮಕ ಅಂಶ ಒಳಗೊಂಡಿರುವ ಪೋಸ್ಟ್ ಅನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು ಎಂಬ ಆರೋಪ ಸಂಬಂಧ 2020 ಆ.11 ರಂದು ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿ ಪೊಲೀಸ್ ಠಾಣೆಗಳ ಮೇಲೆ ದಾಳಿ ನಡೆಸಿದ ಆರೋಪ ಅರ್ಜಿದಾರರ ಮೇಲಿದೆ. ಅರ್ಜಿದಾರರ ವಿರುದ್ಧ ಯುಎಪಿಎ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲಿಸಲಾಗಿತ್ತು.