ಹಾಸನ: ಇತ್ತೀಚೆಗೆ ಯುವಜನಾಂಗ ಹೃದಯಾಘಾತಕ್ಕೆ ತುತ್ತಾಗುತ್ತಿದ್ದು, ಹಾಸನದ ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ ಕವನ.ಕೆ.ವಿ (21) ಹೃದಯಾಘಾತದಿಂದ ಸಾವನ್ನಪ್ಪಿರುವ ದಾರುಣ ಘಟನೆ ಕೆಲವತ್ತಿ ಗ್ರಾಮದಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿನಿ ಕವನ ಹಾಸನ ನಗರದ ಎಂ.ಜಿ.ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ ಬಿ.ಕಾಂ. ವಿದ್ಯಾರ್ಥಿನಿಯಾಗಿದ್ದರು. ಈಗಾಗಲೇ ಕವನ.ಕೆ.ವಿ. ಮೂರು ವಿಷಯಗಳ ಪರೀಕ್ಷೆ ಬರೆದಿದ್ದರು. ಇನ್ನೂ ಮೂರು ಎಕ್ಸಾಂಗಳನ್ನು ಬರೆಯಬೇಕಿತ್ತು.
ಸಂಜೆ ಮನೆಗೆ ನೀರು ತರುತ್ತಿದ್ದಾಗ ದಿಢೀರ್ ಎದೆನೋವು ಕಾಣಿಸಿಕೊಂಡಿದೆ.ಹೀಗಾಗಿ ತಾಯಿ ಬಳಿ ಕುಡಿಯಲು ನೀರು ಕೇಳಿದ್ದರಂತೆ. ತಾಯಿ ನೀರು ತಂದು ಕೊಡುವಷ್ಟರಲ್ಲಿ ಮನೆಯಲ್ಲಿಯೇ ಕುಸಿದು ಬಿದ್ದಿದ್ದರಂತೆ. ಆ ಕೂಡಲೇ ಪೋಷಕರು ಕವನಳನ್ನು ಹಾಸನದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಅಷ್ಟೋತ್ತಿಗಾಗಲೇ ಕವನ ಹೃದಯಾಘಾತದಿಂದ ಮೃತಪಟ್ಟಿದ್ದರು. ಮುದ್ದಾದ ಮಗಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.