ಮೈಸೂರು: ಇ-ಸ್ವತ್ತು ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕಂದಾಯ ಅಧಿಕಾರಿ, ಬಿಲ್ ಕಲೆಕ್ಟರ್ ಇಬ್ಬರು
25,000 ರೂ. ಲಂಚದ ಹಣ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.
ಮೈಸೂರು ಮಹಾನಗರ ಪಾಲಿಕೆಯ ವಲಯ ಕಛೇರಿ-4 ರ ಕಂದಾಯ ಅಧಿಕಾರಿ ಎಂ.ಎನ್.ನಂದೀಶ್ ಮತ್ತು ಬಿಲ್ ಕಲೆಕ್ಟರ್ ರಜಾಕ್ ಕಾರ್ಯಚರಣೆಯಲ್ಲಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದವರು.
ಇ-ಸ್ವತ್ತು ಮಾಡಿಕೊಡಲು ವ್ಯಕ್ತಿಯೊಬ್ಬರ ಬಳಿ ರೂ.
25,000/-(ಇಪ್ಪತ್ತೈದು ಸಾವಿರ ರೂಪಾಯಿಗಳು) ಲಂಚದ ಹಣಕ್ಕೆ ಇಬ್ಬರು ಬೇಡಿಕೆ ಇಟ್ಟಿದ್ದರು. ಈ ಸಂಬಂಧ ವ್ಯಕ್ತಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ದೂರಿನ ಮೇರೆಗೆ ಪ್ರಕರಣ ದಾಖಲಾಗಿತ್ತು.
ಪೊಲೀಸ್ ಮಹಾನಿರ್ದೇಶಕ ಮನೀಷ್ ಕರ್ಬೀಕರ್ ಮತ್ತು ಪೊಲೀಸ್ ಮಹಾನಿರೀಕ್ಷಕ ಸುಬ್ರಹ್ಮಣೇಶ್ವರರಾವ್ ರವರ ಮಾರ್ಗದರ್ಶನದಲ್ಲಿ ಪೊಲೀಸ್ ಅಧೀಕ್ಷಕ ಉದೇಶ.ಟಿ.ಜೆ, ನೇತೃತ್ವದಲ್ಲಿ ಮೈಸೂರು ಲೋಕಾಯುಕ್ತ ಪೊಲೀಸರು ಕಾರ್ಯಚರಣೆ ನಡೆಸಿದ್ದರು.