ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿನ ಜನೌಷಧ ಕೇಂದ್ರಗಳನ್ನು ತಕ್ಷಣ ಸ್ಥಗಿತಗೊಳಿಸುವಂತೆ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಪೀಠ ತಡೆ ನೀಡಿ ಆದೇಶಿಸಿದೆ.
ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿನ ಜನೌಷಧ ಕೇಂದ್ರಗಳನ್ನು ರದ್ದುಗೊಳಿಸಿ ರಾಜ್ಯ ಸರ್ಕಾರ ಇತ್ತೀಚೆಗೆ ಆದೇಶ ಹೊರಡಿಸಿತ್ತು. ಸರ್ಕಾರದ ಈ ಕ್ರಮ ಪ್ರಶ್ನಿಸಿ, ಕಲಬುರಗಿ ಹೈಕೋರ್ಟ್ ಪೀಠದಲ್ಲಿ 16 ಅರ್ಜಿಗಳು ಸಲ್ಲಿಕೆಯಾಗಿದ್ದವು. ಮಂಗಳವಾರ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ.ಅರುಣ್
ಅವರಿದ್ದ ಪೀಠ, ಮುಂದಿನ ವಿಚಾರಣೆವರೆಗೂ
ಜನೌಷಧ ಕೇಂದ್ರ ಸ್ಥಗಿತ ಬೇಡ ಎಂದು ಮಧ್ಯಂತರ ಆದೇಶ ನೀಡಿದೆ.
ಜನೌಷಧ ಕೇಂದ್ರಗಳು ರೋಗಿಗಳಿಗೆ ರಿಯಾಯಿತಿ ದರದಲ್ಲಿ ಔಷಧಗಳನ್ನು ಒದಗಿಸುತ್ತಿವೆ. ಇದರಿಂದ ಬಡ ರೋಗಿಗಳಿಗೆ ತುಂಬಾ ಅನುಕೂಲವಾಗಿದೆ. ರಾಜ್ಯ ಸರ್ಕಾರದ ಈ ನಿರ್ಧಾರ, ಸಾರ್ವಜನಿಕ ಆರೋಗ್ಯ ಸೇವೆಯ ಹಕ್ಕನ್ನು ಉಲ್ಲಂಘಿಸುತ್ತದೆ. ಜನೌಷಧ ಕೇಂದ್ರಗಳನ್ನು ಮುಚ್ಚಿದರೆ ರೋಗಿಗಳು ಮಾರುಕಟ್ಟೆಯಲ್ಲಿ ದುಬಾರಿ ಬೆಲೆ ತೆತ್ತು ಔಷಧ ಕೊಂಡುಕೊಳ್ಳಬೇಕಾಗುತ್ತದೆ ಎಂದು ಅರ್ಜಿದಾರರ ಪರ ವಕೀಲರು ವಾದ ಮಂಡಿಸಿದರು.