ಸುದ್ದಿ

CBSE ಮತ್ತು CISCE ಶಾಲೆಗಳಲ್ಲಿ ಕನ್ನಡ ಕಡ್ಡಾಯ ಪ್ರಶ್ನಿಸಿ ಅರ್ಜಿ: ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

Share It

ಬೆಂಗಳೂರು: ಸಿಬಿಎಸ್‌ಇ ಮತ್ತು ಸಿಐಎಸ್‌ಸಿಇ ಶಾಲೆಗಳಲ್ಲಿ ಕನ್ನಡವನ್ನು ಒಂದು ವಿಷಯವನ್ನಾಗಿ ಕಲಿಸಬೇಕು ಎಂಬ ಕಡ್ಡಾಯ ನಿಯಮವನ್ನು ಪ್ರಶ್ನಿಸಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಮೂರು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸಿ ಎಂದು ಹೈಕೋರ್ಟ್‌, ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

ಈ ಸಂಬಂಧ ಸಿಬಿಎಸ್‌ಇ ಮತ್ತು ಸಿಐಎಸಿಇ  ಶಾಲೆಗಳಲ್ಲಿ ಕಲಿಯುತ್ತಿರುವ ಮಕ್ಕಳ ಪರ ಪೋಷಕ ಸಿ.ಸೋಮಶೇಖ‌ರ್ ಹಾಗೂ ಶಿಕ್ಷಕರು ಸೇರಿದಂತೆ ಒಟ್ಟು 20 ಜನರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ.ಕಾಮೇಶ್ವರ ರಾವ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಆದಿತ್ಯ ಸೋಂಧಿ ಅವರು, ಕಳೆದ ಎರಡು ವರ್ಷಗಳಿಂದ ರಾಜ್ಯ ಸರ್ಕಾರ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಆಕ್ಷೇಪಣೆ ಸಲ್ಲಿಸಿಲ್ಲ ಎಂದು ನ್ಯಾಯಪೀಠದ ಗಮನಕ್ಕೆ ತಂದರು. ಇದಕ್ಕೆ ನ್ಯಾಯಪೀಠ, ‘ಸರ್ಕಾರ ಬೇಗ ಎಚ್ಚೆತ್ತುಕೊಳ್ಳಬೇಕು.  ಮೂರು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸಿ ಎಂದು ಸರ್ಕಾರದ ಪರ ವಕೀಲರಿಗೆ ನಿರ್ದೇಶಿಸಿ ವಿಚಾರಣೆ ಮುಂದೂಡಿತು.

ಅರ್ಜಿಯಲ್ಲಿ ಏನಿದೆ?: ‘ಕರ್ನಾಟಕ ಭಾಷಾ ಕಲಿಕಾ ಕಾಯ್ದೆ, ನಿಯಮಗಳು ಮತ್ತು ನಿರಾಕ್ಷೇಪಣ ಪತ್ರ ನಿಯಮಗಳ ಪ್ರಕಾರ ರಾಜ್ಯದಲ್ಲಿನ ಸಿಬಿಎಸ್‌ಇ ಮತ್ತು ಸಿಐಎಸ್‌ಸಿಇ  ಶಾಲೆಗಳು ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಬೋಧಿಸಬೇಕು ಎಂದು ಸರ್ಕಾರ ಹೇಳಿದೆ. ನಿರಾಕ್ಷೇಪಣ ಪತ್ರ ನಿಯಮಗಳ ಪ್ರಕಾರ ಕನ್ನಡವನ್ನು ದ್ವಿತೀಯ ಅಥವಾ ತೃತೀಯ ಭಾಷೆಯನ್ನಾಗಿ ಬೋಧಿಸಬೇಕು’ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

ಕರ್ನಾಟಕದಲ್ಲಿನ ವಿದ್ಯಾರ್ಥಿಗಳು ತಮ್ಮ ಇಚ್ಛೆಯಂತೆ ಪ್ರಥಮ, ದ್ವಿತೀಯ ಮತ್ತು ತೃತೀಯ ಭಾಷೆಯನ್ನು ಕಲಿಯುವುದಕ್ಕೆ ಮತ್ತು ವಿದ್ಯಾರ್ಥಿಗಳ ಹಕ್ಕಿಗೆ ಈ ಕಾಯ್ದೆ ಅಡ್ಡಿ ಉಂಟು ಮಾಡುತ್ತದೆ. ಇದು ಮಕ್ಕಳ ಶೈಕ್ಷಣಿಕ ಹಾಗೂ ಭವಿಷ್ಯದಲ್ಲಿ ಅವರ ಉದ್ಯೋಗ ಅವಕಾಶಗಳಿಗೆ ತೊಂದರೆ ಉಂಟು ಮಾಡುತ್ತದೆ.  ಎಂದು ಅರ್ಜಿಯಲ್ಲಿ ಆಕ್ಷೇಪಿಸಲಾಗಿದೆ.


Share It

You cannot copy content of this page