ಸುದ್ದಿ

ಗಾಳಿ ಆಂಜನೇಯಸ್ವಾಮಿ ಟೆಂಪಲ್ ಮುಜರಾಯಿ ಇಲಾಖೆಯ ವಶಕ್ಕೆ ನೀಡಿದ್ದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

Share It

ಬೆಂಗಳೂರು: ನಗರದ ಪ್ರಸಿದ್ಧ ಗಾಳಿ ಆಂಜನೇಯಸ್ವಾಮಿ ದೇವಾಸ್ಥನವನ್ನು ಮುಜರಾಯಿ ಇಲಾಖೆ ತನ್ನ ಸುಪರ್ದಿಗೆ ತೆಗೆದುಕೊಂಡ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಮಂಗಳವಾರ ವಿಚಾರಣೆಗೆ ಬರಲಿದೆ.

ಅರ್ಜಿಯನ್ನು ತುರ್ತು ವಿಚಾರಣೆಗೆ ಪರಿಗಣಿಸಬೇಕು ಎಂದು ವಕೀಲ ಪಿ.ಪ್ರಸನ್ನ ಕುಮಾರ್ ಅವರು ನ್ಯಾಯಮೂರ್ತಿ ಸುನಿಲ್ ದತ್ತ ಯಾದವ್ ಅವರಿದ್ದ ನ್ಯಾಯಪೀಠಕ್ಕೆ ಮನವಿ ಮಾಡಿದರು. ಇದಕ್ಕೆ ಪೀಠ, ನಾಳೆ(ಮಂಗಳವಾರ) ವಿಚಾರಣೆಗೆ ಪರಿಗಣಿಸುವುದಾಗಿ ತಿಳಿಸಿದೆ.

ಏನಿದು ಪ್ರಕರಣ?: ದೇವಸ್ಥಾನದ ಹಣವನ್ನು ದುರುಪಯೋಗ ಮಾಡಿಕೊಂಡಿರುವುದು ಹಾಗೂ ಟ್ರಸ್ಟ್ ನಿರ್ವಹಣೆಯಲ್ಲಿ ಪಾರದರ್ಶಕತೆ ಇಲ್ಲದಿರುವ ಆರೋಪಗಳು ಕೇಳಿಬಂದ ಕಾರಣ ಧಾರ್ಮಿಕ ದತ್ತಿ ಇಲಾಖೆಯು ದೇವಸ್ಥಾನವನ್ನು ತನ್ನ ಸುಪರ್ದಿಗೆ ತೆಗೆದುಕೊಂಡಿತ್ತು. ಅಲ್ಲದೆ, ದೇವಾಲಯವನ್ನು ‘ಘೋಷಿತ ಸಂಸ್ಥೆ’ ಎಂದು ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧಾರ್ಮಿಕ ದತ್ತಿ ಇ ಆದೇಶ ಹೊರಡಿಸಿತ್ತು.

ದೇವಾಲಯದ ಹುಂಡಿ ವರ್ಗಾವಣೆಯ ಸಂದರ್ಭ ಸಿಸಿಟಿವಿಯಲ್ಲಿ ಸೆರೆಯಾಗಿದ್ದ ದೇವಾಲಯದ ಸಿಬ್ಬಂದಿಯಿಂದಲೇ ಕಳ್ಳತನವಾಗಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು.
ಹಾಗಾಗಿ, ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಅಧಿನಿಯಮ 1997ರ ಸೆಕ್ಷನ್ 42 ಮತ್ತು 43ರನ್ವಯ ಸರ್ಕಾರದ ವಶಕ್ಕೆ ಪಡೆಯುವ ಸಂಬಂಧ ಸ್ಪಷ್ಟ ಅಭಿಪ್ರಾಯದ ವರದಿ ಸಲ್ಲಿಸುವಂತೆ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು 2024ರ ಅಕ್ಟೋಬರ್ 1ರಂದು ಜಿಲ್ಲಾಧಿಕಾರಿಗೆ ಸೂಚಿಸಿದ್ದರು.

ಅದರಂತೆ, ಅಪರ ಜಿಲ್ಲಾಧಿಕಾರಿ ಮತ್ತು ಉಪ ಆಯುಕ್ತರು 2025ರ ಏಪ್ರಿಲ್ 25ರಂದು ಪ್ರಸ್ತಾಪಿತ ದೇವಾಲಯವನ್ನು ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಅಧಿನಿಯಮದಂತೆ ಘೋಷಿತ ಸಂಸ್ಥೆಯನ್ನಾಗಿ ಘೋಷಿಸಿ ಸರ್ಕಾರದ ವಶಕ್ಕೆ ಪಡೆಯುವ ವಿಚಾರದ ಬಗ್ಗೆ ಅಪರ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿ, ವಿಚಾರಣೆ ನಡೆಸಿ ವಿಚಾರಣಾ ವರದಿಯನ್ನು ಧಾರ್ಮಿಕ ಧತ್ತಿ ಇಲಾಖೆ ಆಯುಕ್ತರಿಗೆ ಸಲ್ಲಿಸಿದ್ದರು.


Share It

You cannot copy content of this page