ಬೆಂಗಳೂರು: ಧರ್ಮಸ್ಥಳದಲ್ಲಿ ಈ ಹಿಂದೆ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದ ಪ್ರಕರಣಗಳ ಸಮಗ್ರ ತನಿಖೆಗೆ ರಾಜ್ಯ ಸರ್ಕಾರವು ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾ ನಿರ್ದೇಶಕ ಪ್ರಣವ ಮೊಹಾಂತಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದೆ.
ಧರ್ಮಸ್ಥಳ ವ್ಯಾಪ್ತಿಯಲ್ಲಿ ನಡೆದಿವೆ ಎನ್ನಲಾದ ಅತ್ಯಾಚಾರ, ಅಸಹಜ ಸಾವು ಪ್ರಕರಣಗಳಿಗೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಬೇಕೆಂದು ಆಗ್ರಹಿಸಿ ರಾಜ್ಯ ಮಹಿಳಾ ಆಯೋಗವು ಜುಲೈ 14ರಂದು ಸರ್ಕಾರಕ್ಕೆ ಪತ್ರ ಬರೆದಿತ್ತು. ಅಲ್ಲದೆ, ವ್ಯಕ್ತಿಯೊಬ್ಬರು ನ್ಯಾಯಾಲಯದಲ್ಲಿ ದಾಖಲಿಸಿದ್ದ ಹೇಳಿಕೆಯ ಆಧಾರದಲ್ಲಿ ಆರೋಪಗಳ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ವಕೀಲರು, ಹೋರಾಟಗಾರರು ಸರ್ಕಾರವನ್ನು ಒತ್ತಾಯಿಸಿದ್ದರು.
ಈ ಪ್ರಕರಣ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆಯಾಗುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಸಚಿವ ಜಿ. ಪರಮೇಶ್ವರ ಜೊತೆ ಸಮಾಲೋಚನೆ ನಡೆಸಿ, ಆರೋಪಗಳ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಲು ವಿಶೇಷ ತಂಡ ರಚಿಸುವ ಬಗ್ಗೆಯೂ ಯೋಚಿಸಿದ್ದರು.ಅದರಂತೆ ವಿಶೇಷ ತನಿಖಾ ತಂಡ ರಚಿಸಿ ಗೃಹ ಇಲಾಖೆಯು ಆದೇಶ ಹೊರಡಿಸಿದೆ.