ಸುದ್ದಿ

ಅಪ್ರಾಪ್ತೆ ಅಪಹರಿಸಿ ಅತ್ಯಾಚಾರ; ಅಪರಾಧಿಗೆ 20 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿದ ಕೋರ್ಟ್

Share It

ದಾವಣಗೆರೆ: ಅಪ್ರಾಪ್ತ ಬಾಲಕಿಯನ್ನು
ಅಪಹರಿಸಿ ಬಲವಂತವಾಗಿ ಅತ್ಯಾಚಾರ ಎಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದಾವಣಗೆರೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಅಪರಾಧಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ.

ವಸಂತ ಅಲಿಯಾಸ್ ನವೇರ ಶಿಕ್ಷೆಗೆ ಒಳಗಾದ ವ್ಯಕ್ತಿ. ಆಗಸ್ಟ್ 18, 2023 ರಂದು ಅಪರಾಧಿ ಬಾಲಕಿಯನ್ನು ಅಹರಿಸಿ ಅತ್ಯಾಚಾರ ಕೃತ್ಯ ಎಸಗಿದ್ದ.ಪೋಷಕರು ಬಾಲಕಿಯನ್ನು ದಾವಣಗೆರೆಯ ಸಂಬಂಧಿಕರ ಮನೆಯಲ್ಲಿ ಇರಿಸಿದ್ದರು.ಮಗಳು ಕಾಣೆಯಾಗಿದ್ದಾಳೆ ಎಂದು ಪೋಷಕರು ದಾವಣಗೆರೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದರು.

ಆರೋಪಿ ವಸಂತ ಅಲಿಯಾಸ್ ನವೇರ ಎಂಬವನು ಬಾಲಕಿಯನ್ನು ಬಲವಂತವಾಗಿ ಚಿತ್ರದುರ್ಗ ಜಿಲ್ಲೆ ಚಳ್ಳಕೇರೆ ತಾಲೂಕಿನ ಗ್ರಾಮವೊಂದರ ಮನೆಗೆ ಕರೆದುಕೊಂಡು ಹೋಗಿ ಮನೆಯಲ್ಲಿ ಯಾರೂ ಇಲ್ಲದ ಸಮಯವನ್ನು ನೋಡಿಕೊಂಡು ಆರೋಪಿಯು ಬಾಲಕಿ ಮೇಲೆ ಹಲವು ಬಾರಿ ಅತ್ಯಾಚಾರ ಮಾಡಿರುತ್ತಾನೆ ಎಂಬುದು ತನಿಖೆಯಿಂದ, ಸಾಕ್ಷಿದಾರರ ಹೇಳಿಕೆಯಿಂದ ದೃಢಪಟ್ಟಿದೆ ಎಂದು ಪೊಲೀಸರ ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿತ್ತು. ಈ ಸಂಬಂಧ ಆರೋಪಿ ವಸಂತ ಅಲಿಯಾಸ್ ನವೇರ ವಿರುದ್ಧ ಪೋಕ್ಸೋ ಕಾಯ್ದೆಯಡಿ ದೋಷರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು.

ಈ ಪ್ರಕರಣದ ವಿಚಾರಣೆ ನಡೆಸಿದ ದಾವಣಗೆರೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್‌ಟಿಎಸ್‌ಸಿ-1 ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀರಾಮ ನಾರಾಯಣ ಹೆಗಡೆ ಅವರು ಆರೋಪ ಸಾಬೀತಾದ ಕಾರಣ ಆರೋಪಿ ವಸಂತ ಅಲಿಯಾಸ್ ನವೇರ (23) ಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 35,000 ರೂ. ದಂಡ ವಿಧಿಸಿ ಮಹತ್ವದ ಆದೇಶ ನೀಡಿದ್ದಾರೆ.

₹ 35,000 ರೂ. ದಂಡದ ಹಣವನ್ನು ಸಂತ್ರಸ್ತೆಗೆ ನೀಡುವಂತೆ ಹಾಗೂ ಸಂತ್ರಸ್ತೆಗೆ ಸರ್ಕಾರದಿಂದ 4 ಲಕ್ಷ ರೂ. ಪರಿಹಾರ ನೀಡುವಂತೆ ನಿರ್ದೇಶಿಸಿದೆ. ಸಂತ್ರಸ್ತೆ ಪರವಾಗಿ ಸರ್ಕಾರಿ ವಕೀಲ ಬಸವರಾಜ್ ಎ.ಎಂ. ಅವರು ವಾದಿಸಿದ್ದರು.


Share It

You cannot copy content of this page