ಬೆಂಗಳೂರು: ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ 13000 ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಉದ್ದೇಶಿಸಿದ್ದು ಈ ಸಂಬಂಧ ಡಿಸೆಂಬರ್ 7 ರಂದು ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಸಲಾಗುತ್ತದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್.ಮಧು ಬಂಗಾರಪ್ಪ ತಿಳಿಸಿದರು.
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಂಬಂಧ ಶಿಕ್ಷಣ ಇಲಾಖೆಯು ಅಕ್ಟೋಬರ್ 23ರಂದು ಅಧಿಸೂಚನೆ ಪ್ರಕಟಿಸಲಿದ್ದು, ಪರೀಕ್ಷೆಯಲ್ಲಿ ಹಾಜರಾಗಲಿಚ್ಚಿಸುವ ಅರ್ಹ ಪದವೀಧರರು ನವೆಂಬರ್ 9 ರೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದರು. ಹೊಸ ಶಿಕ್ಷಕರ ನೇಮಕಾತಿಯಿಂದಾಗಿ ಆಡಳಿತಾರೂಢ ಸರ್ಕಾರದ ಅವಧಿಯಲ್ಲಿ ಸುಮಾರು 26,000 ಶಿಕ್ಷಕರನ್ನು ನೇಮಕಾತಿಗೊಳಿಸಿದಂತೆ ಆಗಲಿದೆ ಎಂದರು.
ಕರ್ನಾಟಕ ಪಬ್ಲಿಕ್ ಶಾಲೆಗಳ ಸಂಖ್ಯೆಯನ್ನು 500ರಿಂದ 800ಕ್ಕೆ ಹೆಚ್ಚಿಸಲಾಗಿದೆ. ಮುಂದಿನ ಶೈಕ್ಷಣಿಕ ವರ್ಷಕ್ಕೆ ನ.1ರಿಂದಲೇ ದಾಖಲಾತಿ ಪ್ರಕ್ರಿಯೆ ಆರಂಭವಾಗಲಿದೆ. ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗಕ್ಕೆ 200 ಶಾಲೆಗಳನ್ನು ಹೆಚ್ಚುವರಿಯಾಗಿ ಕಾಯ್ದಿರಿಸಲಾಗಿದೆ ಎಂದರು.