ಬೆಂಗಳೂರು: ಓಲಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ
ಸಿಬ್ಬಂದಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಂಬಂಧ ಓಲಾ ಎಲೆಕ್ಟ್ರಿಕ್ ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಹಾಗೂ ಹಿರಿಯ ಅಧಿಕಾರಿಯೊಬ್ಬರ ವಿರುದ್ಧ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಕಂಪನಿಯ ಟೆಕ್ನಿಕಲ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಕೆ.ಅರವಿಂದ್ ಅವರು ಸೆ.28ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆ ಮಾಡಿಕೊಳ್ಳಲು ಸಿಇಒ ಭವೇಶ್ ಅಗರ್‌ವಾಲ್, ಹಿರಿಯ ಅಧಿಕಾರಿಗಳಾದ ಸುಬ್ರತ್ ಕುಮಾರ್ ದಾಸ್ ಸೇರಿ ಕಂಪನಿಯ ಸಿಬ್ಬಂದಿಯ ಕಿರುಕುಳ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೆ.ಅರವಿಂದ್ ಅವರ ಸಹೋದರ ಅಶ್ವಿನ್ ಅವರು ನೀಡಿದ ದೂರಿನ ಮೇರೆಗೆ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಸೆಕ್ಷನ್‌ಗಳಾದ 108 ಹಾಗೂ 3 (5)ರ ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಆತ್ಮಹತ್ಯೆ ಮಾಡಿಕೊಂಡ ಅರವಿಂದ್ ಅವರು ಕೋರಮಂಗಲದಲ್ಲಿ ಇರುವ ಓಲಾ ಎಲೆಕ್ನಿಕ್ ಕಂಪನಿಯ ಹೋಮೊಲೊಗೇಷನ್ ಎಂಜಿನಿಯರಿಂಗ್ ವಿಭಾಗದಲ್ಲಿ 2022ರಿಂದ ಕೆಲಸ ಮಾಡುತ್ತಿದ್ದರು. ಚಿಕ್ಕಲ್ಲಸಂದ್ರದ ಮಂಜುನಾಥ್ ನಗರದ ಅಪಾರ್ಟ್‌ಮೆಂಟ್‌ನಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಅರವಿಂದ್ ಬರೆದಿಟ್ಟ 28 ಪುಟಗಳ ಮರಣಪತ್ರವು ಅವರ ಕೊಠಡಿಯಲ್ಲಿ ದೊರೆತಿದೆ. ಅದರಲ್ಲಿ ಕೆಲವು ಅಂಶಗಳನ್ನು ಉಲ್ಲೇಖಿಸಿದ್ದಾರೆ’ ಎಂದು ಎಫ್ಐಆರ್ ನಲ್ಲಿ ಉಲ್ಲೇಖಿಸಲಾಗಿದೆ.