ಚಿಕ್ಕಮಗಳೂರು: ದತ್ತ ಜಯಂತಿ ಬ್ಯಾನರ್ ತೆರವು ವಿಚಾರದಲ್ಲಿ ಆರಂಭವಾದ ಗಲಾಟೆ ಬುಧವಾರ ರಾತ್ರಿ ತೀವ್ರ ಉದ್ವಿಗ್ನತೆಗೆ ಕಾರಣವಾಗಿದ್ದು ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ (40) ಹತ್ಯೆ ಮಾಡಲಾಗಿದೆ.
ಪ್ರಾಥಮಿಕ ತನಿಖೆ ಪ್ರಕಾರ ಸಂಜಯ್ ಮತ್ತು ಮಿಥುನ್ ಎಂಬ ಯುವಕರು ಮಚ್ಚಿನಿಂದ ಗಣೇಶ್ ಮೇಲೆ ದಾಳಿ ನಡೆಸಿ ಸ್ಥಳದಲ್ಲೇ ಕೊಲೆ ಮಾಡಿದ್ದಾರೆ. ಇಬ್ಬರೂ ಬಜರಂಗ ದಳಕ್ಕೆ ಸಂಬಂಧಿಸಿದವರಾಗಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಈಗಾಗಲೇ ಐವರನ್ನು ವಶಕ್ಕೆ ಪಡೆದಿದ್ದಾರೆ. ಗಲಾಟೆಯಲ್ಲಿ ಆರೋಪಿ ಸಂಜಯ್ ತೀವ್ರವಾಗಿ ಗಾಯಗೊಂಡಿದ್ದು, ಚಿಕ್ಕಮಗಳೂರಿನ ಮಲ್ಲೇಗೌಡ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಣೇಶ್ ಅವರು ಸಖರಾಯಪಟ್ಟಣ ಗ್ರಾಮ ಪಂಚಾಯಿತಿ ಸದಸ್ಯರಾಗಿದ್ದು, ಸ್ಥಳೀಯ ರಾಜಕೀಯದಲ್ಲಿ ಸಕ್ರಿಯರಾಗಿದ್ದರು ಎಂದು ತಿಳಿದು ಬಂದಿದೆ.
ಘಟನೆಯ ಹಿನ್ನೆಲೆ: ಹತ್ಯೆಯಾದ ಕಾಂಗ್ರೆಸ್ ಕಾರ್ಯಕರ್ತ ಹಾಗೂ ಗ್ರಾ. ಪಂಚಾಯತಿ ಸದಸ್ಯ ಗಣೇಶ್ ಗೌಡ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಕಲ್ಮರಡಿ ಮಠದ ಸಮೀಪದ ಕಿರಿದಾದ ರಸ್ತೆಯಲ್ಲಿ ಬೈಕ್‌ನಲ್ಲಿ ಬಂದ ಆರೋಪಿಗಳು ಕಾರನ್ನು ಅಡ್ಡಗಟ್ಟಿ, ಮಚ್ಚುಗಳಿಂದ ಕ್ರೂರ ಹಲ್ಲೆ ನಡೆಸಿದ್ದಾರೆ. ನಂತರ ಹಂತಕರು ಮಚ್ಚುಗಳನ್ನು ಅಲ್ಲೇ ಬಿಸಾಡಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಮಚ್ಚು ಸೇರಿದಂತೆ ಕೆಲವು ಪುರಾವೆಗಳನ್ನು ವಶಪಡಿಸಿಕೊಂಡಿದ್ದಾರೆ.
ಘಟನೆಯ ನಂತರ ಸಖರಾಯಪಟ್ಟಣದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಶಾಂತಿ ಕಾಪಾಡಲು ಭದ್ರತೆ ಹೆಚ್ಚಿಸಿರುವ ಪೊಲೀಸರು ಆರೋಪಿಗಳ ಬಂಧನಕ್ಕಾಗಿ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಚಿಕ್ಕಮಗಳೂರು ಎಸ್‌ಪಿ ತಿಳಿಸಿದ್ದಾರೆ.
ಈ ಘಟನೆಯಲ್ಲಿ ಸುಮಾರು 8 ಮಂದಿ ಶಾಮೀಲಾಗಿರುವ ಶಂಕೆ ಇದ್ದು ಪ್ರಮುಖ ಆರೋಪಿ ಗೆರೆಸೇರಿ ಬಜರಂಗ ದಳಕ್ಕೆ ಸಂಬಂಧಿಸಿದ ಸಂಜಯ್, ನಿತಿನ್, ನಾಗಭೂಷಣ್, ದರ್ಶನ್, ಅಜಯ್ ಸೇರಿ ಆರು ಜನರ ವಿರುದ್ಧ ಪ್ರಕರಣ ದಾಖಲಾಗಿದೆ.