ಸುದ್ದಿ

ಉನ್ನಾವೊ ಅತ್ಯಾಚಾರಿಗೆ ರಿಲೀಫ್ ನೀಡಿದ್ದ ದೆಹಲಿ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದ ಸುಪ್ರೀಂಕೋರ್ಟ್

Share It

ನವದೆಹಲಿ: ಉನ್ನಾವೋ ಅತ್ಯಾಚಾರ ಪ್ರಕರಣದ ಅಪರಾಧಿ ಕುಲದೀಪ್‌ ಸೆಂಗಾರ್‌ಗೆ ನೀಡಿದ್ದ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿ, ಷರತ್ತುಬದ್ಧ ಜಾಮೀನು ನೀಡಿದ್ದ ದೆಹಲಿ ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂಕೋರ್ಟ್‌ ಸೋಮವಾರ ತಡೆ ನೀಡಿದೆ.

ದೆಹಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಿಬಿಐ ಹಾಗೂ ವಕೀಲರಾದ ಅಂಜಲಿ ಪಟೇಲ್, ಪೂಜಾ ಶಿಲ್ಪಕರ್ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.

ಈ ಸಂಬಂಧ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾ.ಜೆ. ಕೆ.ಮಹೇಶ್ವರಿ, ನ್ಯಾ.ಆಗಸ್ಟಿನ್ ಜಾರ್ಜ್ ಮಸೀಹ್ ಅವರಿದ್ದ ಪೀಠ, ಮೇಲ್ಮನವಿ ಅರ್ಜಿ ಸಂಬಂಧ ಪ್ರತಿಕ್ರಿಯೆ ನೀಡುವಂತೆ ಅಪರಾಧಿ ಕುಲದೀಪ್ ಸೆಂಗಾರ್‌ಗೆ 4 ವಾರಗಳ ಕಾಲಾವಕಾಶ ನೀಡಿ ನೋಟಿಸ್ ಜಾರಿ ಮಾಡಿದೆ.

2017ರಲ್ಲಿ ನಡೆದಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ದೆಹಲಿಯ ವಿಚಾರಣಾ ನ್ಯಾಯಾಲಯವು 2019ರಲ್ಲಿ ಸೆಂಗರ್‌ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.

ಶಿಕ್ಷೆ ಪ್ರಶ್ನಿಸಿ ಸೆಂಗ‌ರ್ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯನ್ನು ನಡೆಸಿದ್ದ ದೆಹಲಿ ಹೈಕೋರ್ಟ್, ಅರ್ಜಿ ಇತ್ಯರ್ಥವಾಗುವರೆಗೆ ಶಿಕ್ಷೆಯನ್ನು ಅಮಾನತಿನಲ್ಲಿರಿಸಿ, ಡಿಸೆಂಬರ್ 23ರಂದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.

ಸೆಂಗರ್‌ಗೆ ವಿಧಿಸಲಾಗಿದ್ದ ಜೀವಾವಧಿ ಶಿಕ್ಷೆ ಅಮಾನತುಗೊಳಿಸಿರುವುದನ್ನು ಖಂಡಿಸಿ ಸಂತ್ರಸ್ತೆ, ಅವರ ತಾಯಿ ಮತ್ತು ಮಹಿಳಾ ಪರ ಹೋರಾಟಗಾರರು ದೆಹಲಿ ಹೈಕೋರ್ಟ್ ಎದುರು ಪ್ರತಿಭಟನೆ ನಡೆಸಿದ್ದರು. ಜಾಮೀನು ರದ್ದು ಮಾಡಬೇಕು ಎಂದು ಆಗ್ರಹಿಸಿದ್ದರು.


Share It

You cannot copy content of this page