ಸುದ್ದಿ

ಬಿಕ್ಲು ಶಿವ ಹತ್ಯೆ ಪ್ರಕರಣ: ಬಿಜೆಪಿ ಶಾಸಕ ಬೈರತಿ ಬಸವರಾಜ್‌ ಸಿಐಡಿ ವಶಕ್ಕೆ

Share It

ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದ ಐದನೇ ಆರೋಪಿಯಾಗಿರುವ ಬಿಜೆಪಿ ಶಾಸಕ, ಮಾಜಿ ಸಚಿವ ಬೈರತಿ ಬಸವರಾಜ್‌ ಅವರನ್ನು ಏಳು ತಿಂಗಳ ಬಳಿಕ ಸಿಐಡಿ ಪೊಲೀಸರು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದಿದ್ದಾರೆ.

ನೀರಿಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದ ಹೈಕೋರ್ಟ್‌ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿತ್ತು. ಈ ಬೆಳವಣಿಗೆ ಬೆನ್ನಲೇ ಬಂಧನಕ್ಕೆ ಬಲೆ ಬೀಸಿದ್ದ ಸಿಐಡಿ ಅಧಿಕಾರಿಗಳು ವಿಶೇಷ ತಂಡ ರಚಿಸಿ ಬೈರತಿ ಬಸವರಾಜ್ ಅವರ ಪತ್ತೆಗೆ ಶೋಧಕಾರ್ಯ ನಡೆಸಿದ್ದರು.

ಅಹಮದಾಬಾದನಿಂದ ಇಂಡಿಗೋ ವಿಮಾನದ ಮೂಲಕ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೈರತಿ ಆಗಮನ ವಿಚಾರ ತಿಳಿಯುತ್ತಿದ್ದಂತೆ ದೇವನಹಳ್ಳಿ ವಿಭಾಗದ ಎಸಿಪಿ ಶ್ರೀಹರ್ಷ ನೇತೃತ್ವದ ತಂಡ ಬಂಧನಕ್ಕಾಗಿ ಕಾದು ಕುಳಿತಿತ್ತು. ಇಂದು ಸಂಜೆ 6.45ಕ್ಕೆ ಆರೋಪಿಯನ್ನು ವಶಕ್ಕೆ ಪಡೆದು ಸಿಐಡಿ ಸುಪರ್ದಿಗೆ ಒಪ್ಪಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಏರ್‌ಪೋರ್ಟ್‌ನಿಂದ ನೇರವಾಗಿ ನಗರದ ಸಿಐಡಿ ಪ್ರಧಾನ ಕಚೇರಿಗೆ ತರಲಾಯಿತು. ವೈದ್ಯಕೀಯ ಪರೀಕ್ಷೆ ಬಳಿಕ ಬಹುತೇಕ ನಾಳೆ ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ಪಡೆಯಲಾಗುವುದು ಎಂದು ಮೂಲಗಳು ತಿಳಿಸಿವೆ.


Share It

You cannot copy content of this page