ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ನಟ ದರ್ಶನ್ ಜೈಲಿನಲ್ಲಿದ್ದಾರೆ. ಈ ಪ್ರಕರಣ ಸಂಬಂಧ ಪ್ರಮುಖ ಸಾಕ್ಷಿ ಸಂದೀಪ್ ಎಂಬುವರಿಗೆ ಬೆದರಿಕೆ ಹಾಕಿದ್ದ ಆರೋಪದಲ್ಲಿ ಮೂವರು ಆರೋಪಿಗಳನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ.
ನಟ ದರ್ಶನ್ ಅಭಿಮಾನಿ ಸಂಘದ ಸದಸ್ಯರು ಎನ್ನಲಾದ ಸುಹಾಸ್, ವೇಣು ಮತ್ತು ಪುನೀತ್ ಬಂಧಿಸಲಾಗಿದೆ. ರೇಣುಕಸ್ವಾಮಿ ಹತ್ಯೆ ಪ್ರಕರಣದ 49ನೇ ಸಾಕ್ಷಿಯಾಗಿರುವ ಚಿತ್ರದುರ್ಗದ ದುರ್ಗಾ ಬಾರ್ ಆ್ಯಂಡ್ ರೆಸ್ಟೋರೆಂಟ್‌ನ ಕ್ಯಾಷಿಯರ್ ಸಂದೀಪ್‌ಗೆ, ಆಕರ್ಷ್ ಎಂಬ ವ್ಯಕ್ತಿ ಮೂಲಕ ಕರೆ ಮಾಡಿಸಿದ ಆರೋಪಿಗಳು ತಾವು ಹೇಳಿದಂತೆ ಸಾಕ್ಷ್ಯ ನುಡಿಯಬೇಕು ಎಂದು ಬೆದರಿಕೆ ಹಾಕಿದ್ದರು. ಈ ಬಗ್ಗೆ ಸ್ವತಃ ಸಂದೀಪ್ ಮಂಗಳವಾರ ನ್ಯಾಯಾಧೀಶರ ಮುಂದೆ ಈ ವಿಚಾರ ಹೇಳಿದ್ದರು. ಬೆದರಿಕೆ ಹಾಕಿದ್ದ ಆರೋಪಿಗಳ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಹಾಗೂ ಸಾಕ್ಷಿಗೆ ಅಗತ್ಯ ರಕ್ಷಣೆ ಒದಗಿಸುವಂತೆ ನ್ಯಾಯಾಧೀಶರು ತನಿಖಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದರು.
ನ್ಯಾಯಾಲದ ನಿರ್ದೇಶನದಂತೆ ಪ್ರಕರಣ ದಾಖಲಿಸಿಕೊಂಡ ಕಾಮಾಕ್ಷಿಪಾಳ್ಯ ಪೊಲೀಸರು ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.